ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರವು ಇಲ್ಲಿನ ಜನರಿಗೆ ಕಳೆದ 3 ವರ್ಷಗಳಲ್ಲಿ ವಂಚಿಸುವ ಕೆಲಸ ಮಾಡಿದೆ. ಇಲ್ಲಿನ ಜನರಿಗೆ ವಿಶ್ವಾಸದ್ರೋಹ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಟೀಕಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಒಳಜಗಳದಿಂದ ಜನಹಿತದ ಕೆಲಸಗಳನ್ನು ಕಡೆಗಣಿಸಿದ್ದಾರೆ. ಜನಹಿತಕ್ಕೂ ಈ ಸರಕಾರಕ್ಕೂ ಯಾವುದೇ ಸಂಬಂಧ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ಸರಕಾರ ನಡೆಸುತ್ತಿರುವ ನಾಯಕರು ಸರಕಾರವನ್ನು ತಮಗಾಗಿ ಬಳಸಿಕೊಳ್ಳುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಇಲ್ಲಿನ ಸರಕಾರ ದೆಹಲಿ ಕಾಂಗ್ರೆಸ್ಸಿನ ಎಟಿಎಂ ಆಗಿದೆ ಎಂದು ದೂರಿದರು.
ನಮ್ಮ ಪಕ್ಷದ ಜಿಲ್ಲಾ ತರಬೇತಿ ಶಿಬಿರಗಳು ನಡೆಯುತ್ತಿವೆ. ಅದರಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಪಕ್ಷದ ಚಟುವಟಿಕೆ, ಸಕ್ರಿಯ ಸಂಘಟನೆ ಎಂಬುದನ್ನು ತಿಳಿದುಕೊಂಡಿದ್ದಾಗಿ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ಪಕ್ಷದ ಪ್ರಮುಖರು ಇದ್ದರು.








