ಲಕ್ಷ್ಮೇಶ್ವರ: ಟ್ಯೂಷನ್ಗೆ ಹೋಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಅದೇ ಗ್ರಾಮದ ನಿವಾಸಿಗಳಾದ ಅಲ್ಲಾಭಕ್ಷ ಕೊಪ್ಪದ ಮತ್ತು ಆಸಿಫ್ ನಡಾಫ್ ಎಂದು ಗುರುತಿಸಲಾಗಿದೆ. ಟ್ಯೂಷನ್ ಗೆ ತೆರಳಿದ್ದ ಬಾಲಕಿಯನ್ನು ಮಾರ್ಗಮಧ್ಯೆ ತಡೆದ ಆರೋಪಿಗಳು, “ನಿಮ್ಮ ಅಣ್ಣ ಕರೆಯುತ್ತಿದ್ದಾನೆ ಬಾ” ಎಂದು ನಂಬಿಸಿ, ವಾಹನದಲ್ಲಿ ಒತ್ತಾಯಪೂರ್ವಕವಾಗಿ ಅಪಹರಿಸಿಕೊಂಡು ಹೋಗಿದ್ದಾರೆ. ಆನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಬಲಾತ್ಕಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಬಾಲಕಿಯ ತಾಯಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸದ್ಯ ಪೊಲೀಸರು ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.








