ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದಾರುಣ ಘಟನೆ ಸಂಭವಿಸಿದೆ. ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ 17 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಾಣಸವಾಡಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಭೀಮೇಶ್ (17) ಎಂದು ಗುರುತಿಸಲಾಗಿದೆ.ಚಿಕ್ಕಬಾಣಸವಾಡಿಯಲ್ಲಿ ನಿನ್ನೆ (ಸೋಮವಾರ) ಈ ಅವಘಡ ಸಂಭವಿಸಿದೆ. ಕಾಂಪೌಂಡ್ ಗೋಡೆಯ ಕೆಳಭಾಗದಲ್ಲಿ ಮಣ್ಣು ಅಗೆಯುವ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ. ಈ ವೇಳೆ ಕಾರ್ಮಿಕರ ಜೊತೆಗೆ ಹೋಗಿದ್ದ ಬಾಲಕ ಭೀಮೇಶ್ ಅಲ್ಲಿ ನಿಂತಿದ್ದಾಗ, ಇದ್ದಕ್ಕಿದ್ದಂತೆ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬಾಣಸವಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.








