ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅತ್ಯಂತ ಮಹತ್ವದ ಹಾಗೂ ಬಿರುಗಾಳಿ ಎಬ್ಬಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಮುಂದಿನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಬಲವಾದ ವದಂತಿಗಳು ಹರಿದಾಡುತ್ತಿವೆ.
ಡಿಕೆಶಿ ಅವರಿಗೆ ‘ಸಿಎಂ’ ಪಟ್ಟ ಸಿಗುವುದು ಬಹುತೇಕ ಗ್ಯಾರಂಟಿ ಎನ್ನಲಾಗುತ್ತಿದ್ದು, ಈ ಸುದ್ದಿ ಹೊರಬೀಳುತ್ತಿದ್ದಂತೆ ಅವರ ತವರು ಜಿಲ್ಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸಿಹಿ ಸುದ್ದಿ ಕೇಳಿ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಂತೋಷ ಮುಗಿಲು ಮುಟ್ಟಿದೆ. ರಾಮನಗರದಾದ್ಯಂತ ಜಮಾಯಿಸಿದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಭರ್ಜರಿಯಾಗಿ ಸಂಭ್ರಮ ಆಚರಿಸುತ್ತಿದ್ದಾರೆ. ‘ಮುಂದಿನ ಸಿಎಂ ಡಿ.ಕೆ. ಶಿವಕುಮಾರ್’ ಎಂಬ ಜಯಘೋಷಗಳು ತವರಿನಲ್ಲಿ ಮೊಳಗುತ್ತಿವೆ.
ರಾಜ್ಯ ರಾಜಕೀಯದ ಈ ದಿಢೀರ್ ಬೆಳವಣಿಗೆ ಸದ್ಯ ತೀವ್ರ ಕುತೂಹಲ ಮೂಡಿಸಿದ್ದು, ಹೈಕಮಾಂಡ್ ನಡೆ ಹಾಗೂ ನಾಳಿನ ರಾಜಕೀಯ ವಿದ್ಯಾಮಾನಗಳ ಕಡೆಗೆ ಇಡೀ ರಾಜ್ಯದ ಕಣ್ಣು ನೆಟ್ಟಿದೆ.








