ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸುವಂತಹ ಮಹತ್ವದ ವಿದ್ಯಮಾನವೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ.
ರಾಜೀನಾಮೆ ನೀಡುವ ಮುನ್ನ ಮುಖ್ಯಮಂತ್ರಿಗಳು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗಾಗಿ ವಿಶೇಷ ಉಪಹಾರಕೂಟ ಸಭೆಯನ್ನು ಆಯೋಜಿಸಿದ್ದರು. ಈ ಮಹತ್ವದ ಸಭೆಯಲ್ಲಿ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ತಾವು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಿರುವ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದರು. ಹೈಕಮಾಂಡ್ ಸೂಚನೆ ಹಾಗೂ ಪಕ್ಷದ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ತಾವು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಸಚಿವರಿಗೆ ಸ್ಪಷ್ಟಪಡಿಸಿದರು.
ಇದೇ ಉಪಹಾರಕೂಟ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುರಿತಾಗಿಯೂ ಇದ್ದ ಕುತೂಹಲಕ್ಕೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಿದ್ದರಾಮಯ್ಯ ಘೋಷಿಸಿದರು. “ಹೈಕಮಾಂಡ್ ಈಗಾಗಲೇ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಸಿಎಂ ಸ್ಥಾನಕ್ಕೆ ಅಂತಿಮಗೊಳಿಸಿದೆ” ಎಂದು ಅವರು ಸಭೆಯಲ್ಲಿದ್ದ ಸಚಿವರಿಗೆ ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸುತ್ತಿದ್ದಂತೆ, ಸಭೆಯಲ್ಲಿದ್ದ ಎಲ್ಲಾ ಸಚಿವರುಗಳು ಇದಕ್ಕೆ ಒಮ್ಮತದ ಸಮ್ಮತಿ ಸೂಚಿಸಿದರು. ಪಕ್ಷದ ಹೈಕಮಾಂಡ್ ನಿರ್ಧಾರ ಹಾಗೂ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಸಚಿವ ಸಂಪುಟದ ಎಲ್ಲಾ ಸದಸ್ಯರು ಸಾಥ್ ನೀಡಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಮುಂದಿನ ನಾಯಕತ್ವವನ್ನು ಒಪ್ಪಿಕೊಳ್ಳಲು ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂದಿನ ಈ ದಿಢೀರ್ ರಾಜಕೀಯ ಬೆಳವಣಿಗೆಗಳು ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿವೆ. ಸಿದ್ದರಾಮಯ್ಯ ಅವರ ರಾಜೀನಾಮೆ ಸಲ್ಲಿಕೆಯ ಬೆನ್ನಲ್ಲೇ ಹೊಸ ಸರ್ಕಾರ ರಚನೆ ಹಾಗೂ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಅತ್ಯಂತ ವೇಗವಾಗಿ ಚುರುಕುಕೊಳ್ಳಲಿವೆ.








