ಭೋಪಾಲ್: ಮಧ್ಯಪ್ರದೇಶದ ಅನುಪುರ್ ಜಿಲ್ಲೆಯಲ್ಲಿ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟ್ರ್ಯಾಕ್ಟರ್-ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಆರು ಮಂದಿ ದುರ್ಮರಣಕ್ಕೀಡಾಗಿದ್ದು, ಕನಿಷ್ಠ 39 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
ಅನುಪುರ್ ಜಿಲ್ಲೆಯ ಗಿಂಜ್ರಿ ಗ್ರಾಮದ ಬಳಿ ಈ ದಾರುಣ ಘಟನೆ ನಡೆದಿದೆ. ಪಡನಿಯಾ ಗ್ರಾಮದಿಂದ ಸುಮಾರು 50ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್, ಬಿಜೋರಾ ಗ್ರಾಮದ ಶನಿದೇವ ಮುಕ್ತಿ ಧಾಮ ದೇವಸ್ಥಾನದ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಟ್ರಾಲಿಯ ಅಡಿಯಲ್ಲಿ ಹಲವು ಪ್ರಯಾಣಿಕರು ಸಿಲುಕಿಕೊಂಡಿದ್ದರಿಂದ ಸ್ಥಳದಲ್ಲಿ ಕಿರುಚಾಟ, ಆಕ್ರಂದನ ಮುಗಿಲು ಮುಟ್ಟಿತ್ತು.
ಸ್ಥಳೀಯರು ಮತ್ತು ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಗ್ರಾಮಸ್ಥರ ಸಹಾಯದೊಂದಿಗೆ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಟ್ರಾಲಿಯ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದು ತಕ್ಷಣವೇ ಪಾಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ 15 ಜನರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣ ಏನೆಂಬುದರ ತನಿಖೆ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಮೋಹನ್ ಯಾದವ್ ತೀವ್ರ ಸಂತಾಪ: ಧನಸಹಾಯ ಘೋಷಣೆ
ಭೀಕರ ಅಪಘಾತದ ಕುರಿತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ತೀವ್ರ ಕಳವಳ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಅಲ್ಲದೆ, ಗಾಯಗೊಂಡಿರುವ ಪ್ರತಿಯೊಬ್ಬರಿಗೂ ಉಚಿತ ಹಾಗೂ ಸೂಕ್ತ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸ್ಥಳೀಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ
ನೆಚ್ಚಿನ ನಾಯಕನ ‘ಸಿಎಂ ಪಟ್ಟ’ಕ್ಕಾಗಿ 3 ವರ್ಷಗಳ ‘ತಪಸ್ಸು’: ಕೊನೆಗೂ ಫಲಿಸಿತು ‘ಡಿಕೆಶಿ ಅಭಿಮಾನಿ’ಯ ಸಂಕಲ್ಪ!








