ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಗ್ರಾಮದ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಓಮ್ನಿ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ
ಹಿರಿಯೂರಿನಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಓಮ್ನಿ ಕಾರಿಗೆ ಎದುರಿನಿಂದ ಅತಿ ವೇಗವಾಗಿ ಬಂದ ಮತ್ತೊಂದು ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಓಮ್ನಿ ಕಾರು ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಓಮ್ನಿ ಕಾರಿನಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರು ಮೂಲತಃ ಆಂಧ್ರಪ್ರದೇಶದವರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಇಬ್ಬರು ಮಕ್ಕಳಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು
ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆ ನಡೆದ ತಕ್ಷಣ ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ನೆರವಿನೊಂದಿಗೆ ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಹುಳಿಯಾರು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಾಗತಿಕ ‘ಜಲ-ನಾವೀನ್ಯತಾ’ ಕೇಂದ್ರವಾಗಿ ಬೆಳೆಯಲಿದೆ ಬೆಂಗಳೂರು







