ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಮುಂದಿನ 48 ಗಂಟೆಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.
ಮುಂಬರುವ ಏಳು ದಿನಗಳ ಅವಧಿಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 7 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಯಾವ ಜಿಲ್ಲೆಗಳಿಗೆ ಅಲರ್ಟ್?
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7 ರಿಂದ 10ರವರೆಗೆ ಭಾರೀ ಮಳೆಯ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಅವಧಿಯಲ್ಲಿ ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು ಎಚ್ಚರಿಕೆ ನೀಡಲಾಗಿದೆ.ಇದಲ್ಲದೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಎರಡು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಸಹ ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








