ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಹೊರಬೀಳಲಿದೆ. ಎರಡೂ ಸದನಗಳ ಟಿಕೆಟ್ ಆಕಾಂಕ್ಷಿಗಳ ನಡುವೆ ಭಾರಿ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಪ್ರಸ್ತುತ ಲಭ್ಯವಿರುವ ಮಾಹಿತಿ ಪ್ರಕಾರ, ರಾಜ್ಯಸಭೆಯ ಒಂದು ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಮೂವರು ಪ್ರಮುಖ ನಾಯಕರ ನಡುವೆ ತೀವ್ರ ಪೈಪೋಟಿ ನಡೆದಿದೆ. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಹಾಗೂ ಪಕ್ಷದ ಹಿರಿಯ ನಾಯಕ ನಿರ್ಮಲ್ ಕುಮಾರ್ ಸುರಾನಾ ಅವರು ರೇಸ್‌ನಲ್ಲಿದ್ದಾರೆ. ಅನುಭವ ಮತ್ತು ರಾಜಕೀಯ ಸಮೀಕರಣಗಳ ಆಧಾರದ ಮೇಲೆ ಈ ಮೂವರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಹೈಕಮಾಂಡ್ ಗಂಭೀರ ಕಸರತ್ತು ನಡೆಸಿದೆ.
ಇನ್ನೊಂದೆಡೆ, ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇದೆ. ಪ್ರಮುಖವಾಗಿ ನಟಿ ಶ್ರುತಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಶಿಸ್ತು ಸಮಿತಿ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್, ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಶಿಕ್ಷಣ ಉದ್ಯಮಿ ಬಾಲ್ಡ್ ವಿನ್ ವೇಣುಗೋಪಾಲ್ ಅವರು ಟಿಕೆಟ್ ಕೈವಶ ಮಾಡಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.
ಈ ಬಾರಿ ವಿಧಾನ ಪರಿಷತ್ ಟಿಕೆಟ್ ಹಂಚಿಕೆಯಲ್ಲಿ ಮಹಿಳಾ ಕೋಟಾಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ನಟಿ ಶ್ರುತಿ ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮಹಿಳಾ ಪ್ರಾತಿನಿಧ್ಯದ ಅಡಿಯಲ್ಲಿ ಈ ಇಬ್ಬರಲ್ಲಿ ಒಬ್ಬರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಇದು ಪಕ್ಷದ ಆಂತರಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.
ಅಂತಿಮವಾಗಿ ಟಿಕೆಟ್ ಹಂಚಿಕೆಗಾಗಿ ಬಿಜೆಪಿ ಹೈಕಮಾಂಡ್ ವಿಶೇಷ ಸೂತ್ರವೊಂದನ್ನು ಸಿದ್ಧಪಡಿಸಿದೆ ಎನ್ನಲಾಗಿದೆ. ‘ಒಬ್ಬರು ಮಹಿಳೆ ಮತ್ತು ಒಬ್ಬರು ಲಿಂಗಾಯತ’ ಸಮುದಾಯದ ನಾಯಕನಿಗೆ ಅವಕಾಶ ನೀಡುವ ಸೂತ್ರ ಅಥವಾ ಕೇವಲ ಸಾಮಾಜಿಕ ಸಮೀಕರಣದ ‘ಒಂದು ಮಹಿಳೆ ಮತ್ತು ಒಂದು ಒಬಿಸಿ/ಇತರ’ ಸೂತ್ರದ ಅಡಿಯಲ್ಲಿ ಟಿಕೆಟ್ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಸೂತ್ರದ ಹಿನ್ನೆಲೆಯಲ್ಲಿ ಅಂತಿಮ ಪಟ್ಟಿಯಲ್ಲಿ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಕೆಲವೇ ಕ್ಷಣಗಳಲ್ಲಿ ಸ್ಪಷ್ಟವಾಗಲಿದೆ.








