ಬೆಂಗಳೂರು: ಎಐಸಿಸಿ (AICC) ಕಾರ್ಯದರ್ಶಿ ಹಾಗೂ ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಅತ್ಯಂತ ನಿಷ್ಠಾವಂತ ಕಾರ್ಯಕರ್ತ ಹಾಗೂ ಸಂಘಟಕರಾಗಿದ್ದ ಸೂರಜ್ ಹೆಗ್ಡೆ ಅವರ ಅಕಾಲಿಕ ಅಗಲಿಕೆಗೆ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಮತ್ತು ಅಪಾರ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹೋದ್ಯೋಗಿಯಾಗಿದ್ದ ಸೂರಜ್ ಹೆಗ್ಡೆ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ರಾಜಕೀಯ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದ ಅವರು, ತಮ್ಮ ಸರಳತೆ, ಸ್ನೇಹಪರ ವ್ಯಕ್ತಿತ್ವ ಹಾಗೂ ಕಾರ್ಯಕರ್ತರೊಂದಿಗೆ ಹೊಂದಿದ್ದ ಆತ್ಮೀಯತೆಯಿಂದ ಗುರುತಿಸಿಕೊಂಡಿದ್ದರು. ಅವರ ನಿಧನವು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ನಾಯಕರು ಕಂಬನಿ ಮಿಡಿದಿದ್ದಾರೆ.
”ಸೂರಜ್ ಹೆಗ್ಡೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ಪ್ರಮುಖ ನಾಯಕರು ಪ್ರಾರ್ಥಿಸಿದ್ದಾರೆ.
ಮೃತರು ಪತ್ನಿ, ಮಕ್ಕಳನ್ನು ಸೇರಿದಂತೆ ಅಪಾರ ಬಂಧುಬಳಗ, ಸ್ನೇಹಿತರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
ಸಿಎಂ ಡಿ.ಕೆ ಶಿವಕುಮಾರ್ ಸಂತಾನ
ಸೂರಜ್ ಹೆಗಡೆ ಅವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
“ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ ಆಘಾತವಾಗಿದೆ. ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲೇ ಆಗುತ್ತಿಲ್ಲ.
ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ.
ಸೂರಜ್ ಹೆಗ್ಡೆ ಅವರು ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸೂರಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.








