ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಾರುತಗಳು ತೀವ್ರವಾಗಿ ಚುರುಕುಗೊಂಡಿದ್ದು, ಜೂನ್ 8 ರಿಂದ ಜೂನ್ 10 ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಟ್ಟು 8 ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಪ್ರವಾಹದಂತಹ ಪರಿಸ್ಥಿತಿ ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಇಲಾಖೆಯು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಜೂನ್ 8 ರಿಂದ 10 ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ,ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಎರಡು ದಿನ ಇಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಜೂನ್ 10 ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ.ಉತ್ತರ ಕನ್ನಡ ಜಿಲ್ಲೆಯಲ್ಲೂ ಈ ಮೂರು ದಿನಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಸಾರ್ವಜನಿಕರು ಹಾಗೂ ನದಿ ತೀರದ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.








