ದುಬೈನಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವು ಭಾರತೀಯ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಸ್ತೆಯ ಮಧ್ಯೆ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.”ದುಬೈನಲ್ಲಿ ಸಂಭವಿಸಿದ ಈ ದುರಂತ ರಸ್ತೆ ಅಪಘಾತದಲ್ಲಿ ಭಾರತೀಯ ಕಾರ್ಮಿಕರು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ” ಎಂದು ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿ (Indian Consulate) ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿದೆ.
ಮೃತಪಟ್ಟವರ ಕುಟುಂಬಗಳಿಗೆ ಎಲ್ಲಾ ರೀತಿಯ ಸಹಾಯ ಮತ್ತು ಬೆಂಬಲವನ್ನು ನೀಡಲು ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವುದಾಗಿ ರಾಯಭಾರ ಕಚೇರಿ ತಿಳಿಸಿದೆ.
ದುಬೈ ಪೊಲೀಸ್ನ ಜನರಲ್ ಡಿಪಾರ್ಟ್ಮೆಂಟ್ ಆಫ್ ಟ್ರಾಫಿಕ್ನ ನಿರ್ದೇಶಕ ಬ್ರಿಗೇಡಿಯರ್ ಜುಮಾ ಸಲೇಮ್ ಬಿನ್ ಸುವೈದಾನ್ ಮಾತನಾಡಿ, “ತಾಂತ್ರಿಕ ದೋಷದಿಂದಾಗಿ ಲಾರಿಯು ಇದ್ದಕ್ಕಿದ್ದಂತೆ ರಸ್ತೆಯ ಮಧ್ಯಭಾಗದಲ್ಲಿ ನಿಂತಿತ್ತು. ಪ್ರಾಥಮಿಕ ತನಿಖೆಯಿಂದ ಈ ವಿಷಯ ತಿಳಿದುಬಂದಿದೆ” ಎಂದು ತಿಳಿಸಿದ್ದಾರೆ.
ಬಸ್ ಚಾಲಕನು ಸರಿಯಾಗಿ ಗಮನಿಸದೆ ಮತ್ತು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವಲ್ಲಿ ವಿಫಲವಾದ ಕಾರಣದಿಂದಾಗಿ, ಹಿಂದಿನಿಂದ ಬಂದು ಲಾರಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದಾನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.








