ಕಲಬುರಗಿ: ಇಲ್ಲಿನ ಗಂಗಾ ನಗರ ಪ್ರದೇಶದಲ್ಲಿ ಪೊಲೀಸ್ ಇಲಾಖೆಯ ಪಿಎಸ್‌ಐಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬಸವರಾಜ ಹೆರೂರ್ (2014ರ ಬ್ಯಾಚ್ ಪಿಎಸ್‌ಐ) ಎಂದು ಗುರುತಿಸಲಾಗಿದೆ. ಅವರು ಕಳೆದ ಎರಡು ವರ್ಷಗಳಿಂದ ಕಲಬುರಗಿ ಡಿಸಿಆರ್‌ಬಿ (DCRB) ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಾಹಿತಿಯ ಪ್ರಕಾರ, ಮಂಗಳವಾರ ತಡರಾತ್ರಿ ಬಸವರಾಜ ಹೆರೂರ್ ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ತಿಳಿಸಿದ್ದರು ಎನ್ನಲಾಗಿದೆ. ಕೂಡಲೇ ಸ್ನೇಹಿತರು ಅವರ ತಂದೆಗೆ ವಿಷಯ ತಿಳಿಸಿದ್ದು, ಅವರ ತಂದೆ ಮನೆಗೆ ಧಾವಿಸಿ ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಬಸವರಾಜ ಹೆರೂರ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಕೌಟುಂಬಿಕ ಕಲಹದ ಹಿನ್ನೆಲೆ ಈ ದುರ್ಘಟನೆ ಸಂಭವಿಸಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆ ಸಂಬಂಧ ಆರ್. ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.








