ನವದೆಹಲಿ: ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಮತ್ತೊಬ್ಬ ಶಾಸಕ ಅಮನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದೆ.
ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಕೇಂದ್ರ ತನಿಖಾ ಸಂಸ್ಥೆಯ ಮುಂದೆ ಹಾಜರಾದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ.
ಓಖ್ಲಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ 50 ವರ್ಷದ ಶಾಸಕ ಕಳೆದ ವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ನಂತರ ಶರಣಾಗಿದ್ದಾರೆ.
ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಈ ಪ್ರಕರಣ ಸಂಬಂಧಿಸಿದೆ. ಏಪ್ರಿಲ್ 18 ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನದೊಂದಿಗೆ ತನಿಖೆಗೆ ಸಹಕರಿಸುವಂತೆ ಸುಪ್ರೀಂ ಕೋರ್ಟ್ ಅವರಿಗೆ ಸೂಚನೆ ನೀಡಿತ್ತು.
ಗುರುವಾರ ಇಡಿ ಕಚೇರಿಗೆ ಪ್ರವೇಶಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಖಾನ್, ತಾನು ವಕ್ಫ್ ಮಂಡಳಿಯ ಅಧ್ಯಕ್ಷನಾಗಿದ್ದಾಗ ನಿಯಮಗಳನ್ನು ಅನುಸರಿಸಿದ್ದೇನೆ ಮತ್ತು ಕಾನೂನು ಅಭಿಪ್ರಾಯವನ್ನು ಪಡೆದ ನಂತರ ಮತ್ತು 2013 ರಲ್ಲಿ ಬಂದ ಹೊಸ ಕಾಯ್ದೆಯ ಪ್ರಕಾರ ಎಲ್ಲವನ್ನೂ ಮಾಡಿದ್ದೇನೆ ಎಂದು ಹೇಳಿದ್ದಾರೆ.