ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 25,540 ಮಂಜೂರಾದ ಹುದ್ದೆಗಳಿದ್ದು, ಈ ಪೈಕಿ ಖಾಲಿ ಇರುವ 8,770 ಹುದ್ದೆ ಪೈಕಿ 4 ಸಾವಿರ ಹುದ್ದೆಯ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಪರಿಚಯಾತ್ಮಕ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಎ ವರ್ಗದ 268, ಬಿ ವರ್ಗದ 1,079, ಸಿ ವರ್ಗದ 5,294, ಡಿ ವರ್ಗದ 2,129 ಹುದ್ದೆಗಳು ಖಾಲಿ ಇದ್ದು, ಈ ಪೈಕಿ ಎಲ್ಲ ವರ್ಗದ ಹುದ್ದೆಗಳ ಪೈಕಿ 4 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಖಂಡ್ರೆ ತಿಳಿಸಿದರು.
ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಎಲ್ಲ ಹುದ್ದೆಗಳನ್ನು ಪಾರದರ್ಶಕವಾಗಿ ಭರ್ತಿ ಮಾಡಲು ಸೂಚಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೂ ಕ್ರಮ ವಹಿಸುವಂತೆ ಸೂಚನೆ ನೀಡಿರುವುದಾಗಿ ಈಶ್ವರ್ ಖಂಡ್ರೆ ತಿಳಿಸಿದರು.
ಈಗಾಗಲೇ ಜೂನ್ 3ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ 56 ಸಾವಿರ ಹುದ್ದೆಗಳ ನೇಮಕಾತಿಗೆ ಸಮ್ಮತಿ ಸೂಚಿಸಿದ್ದು, 1,400 ಹುದ್ದೆಗಳ ಭರ್ತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಅನುಮತಿ ನೀಡಲಾಗಿದೆ. ಈ ಹುದ್ದೆಗಳ ಭರ್ತಿಗೆ ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.








