ಏರ್ ಇಂಡಿಯಾ ಅಪಘಾತದ ತನಿಖೆ ಪೂರ್ಣಗೊಳ್ಳುವ ಹಂತದಲ್ಲಿದೆ ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಈ ವರ್ಷದ ಅಂತ್ಯದ ವೇಳೆಗೆ ತನ್ನ ಅಂತಿಮ ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಮೂಲಗಳು ತಿಳಿಸಿವೆ.
ಜೂನ್ 12 ರಂದು ಲಂಡನ್ ಗೆ ತೆರಳುತ್ತಿದ್ದ ಬೋಯಿಂಗ್ 787 ಡ್ರೀಮ್ ಲೈನರ್ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೂಡಲೇ ವೈದ್ಯಕೀಯ ಕಾಲೇಜು ಹಾಸ್ಟೆಲ್ ಗೆ ನುಗ್ಗಿ ಒಂದು ದಶಕದ ಅತ್ಯಂತ ಮಾರಣಾಂತಿಕ ವಿಮಾನಯಾನ ಅಪಘಾತದಲ್ಲಿ ವಿಮಾನದಲ್ಲಿದ್ದ 242 ಪ್ರಯಾಣಿಕರು ಮತ್ತು ಇತರ 19 ಮಂದಿ ಸಾವನ್ನಪ್ಪಿದ್ದರು.
ತನಿಖೆ ಸುಗಮವಾಗಿ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡೂ ಕಪ್ಪು ಪೆಟ್ಟಿಗೆಗಳ ತನಿಖೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ತನಿಖಾಧಿಕಾರಿಗಳು ಪ್ರಸ್ತುತ ಫ್ಲೈಟ್ ಡೇಟಾ ರೆಕಾರ್ಡರ್ (ಎಫ್ ಡಿಆರ್) ಮತ್ತು ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್) ಎರಡನ್ನೂ ಪರಿಶೀಲಿಸುತ್ತಿದ್ದಾರೆ.