ಬೆಂಗಳೂರು : ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನದಲ್ಲಿ ಭಾರಿ ಏರಿಕೆ ಆಗಿದ್ದು, ನಿನ್ನೆ ಬೀದರ್ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನಕ್ಕೆ 20 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹಾಗೂ ಬಿಸಿಲಿನ ತೀವ್ರತೆ ಎರಡೂ ಒಂದೇ ಸಮಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಇಂದು ಮತ್ತು ಮುಂದಿನ ಎರಡು ದಿನಗಳಿಗೆ ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಇಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಗಾಳಿಯ ವೇಗವೂ ಹೆಚ್ಚಾಗಬಹುದು ಎಂದು ಇಲಾಖೆ ಎಚ್ಚರಿಸಿದೆ.
ನಾಳೆ ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.








