ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಇಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿ ರಾಜ್ಯದಲ್ಲಿ ಕೆಟ್ಟ ಸರ್ಕಾರವಿದ್ದು ಅದನ್ನು ಕಿತ್ತುಹಾಕಲು ಮೈತ್ರಿ ಅವಶ್ಯವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 21ರಂದು ದೆಹಲಿಗೆ ಹೋಗುತ್ತಿದ್ದೇನೆ. ಅಲ್ಲಿ ಏನು ಚರ್ಚೆ ಆಗುತ್ತದೆ ಎಂದು ನೋಡೋಣ. ಕೆಟ್ಟ ಸರ್ಕಾರ ತೆಗೆಯಬೇಕೆಂದರೆ ಆಪರೇಷನ್ ಮಾಡುವುದು ಅಂತ ಅಲ್ಲ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ಎಂದು ಅರ್ಥ ಎಂದು ಸ್ಪಷ್ಟಪಡಿಸಿದರು.
ಇನ್ನು ಕಾಂಗ್ರೆಸ್ ಆಪರೇಷನ್ ಹಸ್ತದ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ನವರು ಅದೇನೋ ಆಪರೇಷನ್ ಮಾಡುತ್ತಿದ್ದಾರಂತೆ ಬಿಜೆಪಿ ಮತ್ತು ಜೆಡಿಎಸ್ ಅವರನ್ನು ಕರೆದುಕೊಳ್ಳುತ್ತಿದ್ದಾರಂತೆ ಇರುವವರು ಇರಲಿ ಹೋಗುವವರು ಹೋಗಲಿ ಸಂತೋಷ ಎಂದು ತಿಳಿಸಿದರು. ಇನ್ನೂ ನಿನ್ನೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಕೂಡ ಮೈತ್ರಿ ವಿಷಯ ಕುರಿತಾಗಿ ಯಾವುದೇ ಚರ್ಚೆ ಆಗಿಲ್ಲ ಎಂದು ದೆಹಲಿಯಲ್ಲಿ ಮಾತನಾಡಿದ್ದರು.
ಮೈತ್ರಿ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ : ಎಚ್.ಡಿ ದೇವೇಗೌಡ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರಾದ ಎಚ್.ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ಯಾವತ್ತು ಪ್ರತ್ಯೇಕವಾಗಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿಲ್ಲ ಬಿಜೆಪಿ ಜೊತೆಗೆ ನಮ್ಮ ಮೈತ್ರಿ ವಿಚಾರವಾಗಿ ನಾನು ಯಾರನ್ನು ಭೇಟಿ ಆಗಿಲ್ಲ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಚರ್ಚೆಗೆ ಬಂದರೆ ಆ ಕುರಿತಂತೆ ಮಾತನಾಡುತ್ತೇನೆ ಎಂದು ತಿಳಿಸಿದ್ದರು.
ಈಗ ನಾವು ಎಲ್ಲಿ ಇದ್ದೇವೋ ಅಲ್ಲೇ ಇರುತ್ತೇವೆ ಎಂದು ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು.ಈಗ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದರು.