ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ತಿಂಗಳ 10ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಲೋಕಸಭಾ ಚುನಾವಣೆಯ ಸಿದ್ಧತೆ ಸೇರಿದಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಸ್ಥಾನಗಳ ಹಂಚಿಕೆ ಹಾಗೂ ಕೆಲವು ಹಿರಿಯ ನಾಯಕರ ಅಹ ವಾಲುಗಳ ಬಗ್ಗೆ ಅಮಿತ್ ಶಾ ಅವರು ರಾಜ್ಯ ನಾಯಕರೊಂದಿಗೆ ಸಮಾಲೋಚನೆ ನಡೆಸುವ ನಿರೀಕ್ಷೆ ಇದೆ ಎನ್ನಲಾಗಿದೆ.
ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವ ಮತ್ತು ಅದೇವೇಳೆ ಕಾಂಗ್ರೆಸ್ ನಾಯಕಶಾಮನೂರು ಶಿವಶಂಕರಪ್ಪ ಅವರ ಹೆಸರಿನ ಅತಿಥಿಗೃಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಇದೇ ವೇಳೆ ಬೆಂಗಳೂರಿನಲ್ಲಿ ರಾಜ್ಯ ನಾಯಕರೊಂದಿಗೆ ಕೋರ್‌ಕಮಿಟಿ ಸಭೆ ನಡೆಸುವ ಸಂಭವವಿದೆ ಎನ್ನಲಾಗಿದೆ.
ಇತ್ತೀಚೆಗೆ ರಾಜ್ಯ ಬಿಜೆಪಿಯ ನಾಯಕರಾದ ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ ಅವರು ಅಹವಾಲು ಹೊತ್ತು ದೆಹಲಿಗೆ ತೆರಳಿದ್ದವೇಳೆ ಅಮಿತ್ ಶಾ ಅವರು ಫೆಬ್ರವರಿಯಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿದ ವೇಳೆ ರಾಜ್ಯ ನಾಯಕರೊಂದಿಗೆ ಸಭೆ ನಡೆಸುತ್ತೇನೆ ಎಂಬ ಮಾಹಿತಿ ನೀಡಿದ್ದರು. ಹೀಗಾಗಿ, ಆ ಭೇಟಿ ಇದೇ ಆಗಬಹುದು ಎಂಬ ಮಾತು ಬಿಜೆಪಿ ಪಾಳೆಯದಿಂದ ಕೇಳಿಬರುತ್ತಿದೆ.