ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಗ್ನಿ ಅವಘಡಗಳ ಸರಣಿ ಮುಂದುವರೆದಿದ್ದು, ಇಂದು ನಗರದ ನಾಯಂಡಹಳ್ಳಿಯಲ್ಲಿ ಪ್ಲಾಸ್ಟಿಕ್ ಹಾಗೂ ಸ್ಕ್ರಾಪ್ ಗೋದಾಮೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಜನವಸತಿ ಪ್ರದೇಶದ ಸಮೀಪದಲ್ಲೇ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿದ್ದ ಪ್ಲಾಸ್ಟಿಕ್ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಕ್ಷಣಾರ್ಧದಲ್ಲಿ ಧಗಧಗನೆ ಉರಿಯಲಾರಂಭಿಸಿವೆ.
ಘಟನೆಯ ತೀವ್ರತೆ ಎಷ್ಟಿತ್ತೆಂದರೆ, ಗೋದಾಮಿನಿಂದ ಹೊರಹೊಮ್ಮಿದ ದಟ್ಟವಾದ ಕಪ್ಪು ಹೊಗೆ ನಾಯಂಡಹಳ್ಳಿ ಸುತ್ತಮುತ್ತಲ ಕಿಲೋಮೀಟರ್‌ಗಟ್ಟಲೆ ಪ್ರದೇಶವನ್ನು ಆವರಿಸಿಕೊಂಡಿತ್ತು. ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ಲಾಸ್ಟಿಕ್ ಮತ್ತು ಸ್ಕ್ರಾಪ್ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿಯನ್ನು ಹತೋಟಿಗೆ ತರುವುದು ಸಿಬ್ಬಂದಿಗೆ ಸವಾಲಾಗಿ ಪರಿಣಮಿಸಿದೆ.
ಬೆಂಕಿ ನಂದಿಸಲು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಪಕ್ಕದಲ್ಲೇ ಇತರೆ ಕಟ್ಟಡಗಳು ಮತ್ತು ಮರಗಳಿದ್ದರಿಂದ ಬೆಂಕಿ ಪಸರಿಸದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಅದೃಷ್ಟವಶಾತ್, ಈ ಅವಘಡದಲ್ಲಿ ಪ್ರಾಣಾಪಾಯ ಸಂಭವಿಸಿದ ಬಗ್ಗೆ ಇದುವರೆಗೆ ಯಾವುದೇ ವರದಿಯಾಗಿಲ್ಲ. ಆದರೆ, ಬೆಂಕಿಯ ಅಬ್ಬರಕ್ಕೆ ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ಹಾಗೂ ಸ್ಕ್ರಾಪ್ ವಸ್ತುಗಳು ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.








