ಬೆಂಗಳೂರು : ರಾಜ್ಯದ ರೈತರಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಾಗುತ್ತಿರುವುದರಿಂದ ಹಗಲು ವೇಳೆಯೇ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸೂಚಿಸಿದ್ದಾರೆ.
ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಎಲ್) ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವರು, “ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಇಲ್ಲದಂತೆ ನೋಡಿಕೊಳ್ಳಬೇಕು”, ಎಂದು ಸೂಚಿಸಿದರು.
ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನ ನಡೆಸಿದ ಅವರು, ಕಳೆದ ಬೇಸಿಗೆಯಲ್ಲಿ ಸರಾಸರಿ 3,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೂಲಕ ಉಷ್ಣ ವಿದ್ಯುತ್ ಸ್ಥಾವರಗಳು ದಾಖಲೆ ನಿರ್ಮಿಸಿದ್ದವು.ಈ ಬಾರಿ ಅದಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಿ ಹೊಸ ದಾಖಲೆ ಸ್ಥಾಪಿಸಬೇಕು. ಅದಕ್ಕಾಗಿ ಎಲ್ಲಾ ಉತ್ಪಾದನಾ ಘಟಕಗಳನ್ನು ಸನ್ನದ್ಧವಾಗಿ ಇಡಬೇಕು ಎಂದು ನಿರ್ದೇಶನ ನೀಡಿದರು.
ರಾಯಚೂರು, ಯರಮರಸ್ ಮತ್ತು ಬ್ಳಾರಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕೆಲವು ಉತ್ಪಾದನಾ ಘಟಕಗಳು ಸ್ಥಗಿತಗೊಂಡಿರುವ ಕುರಿತು ಮಾಹಿತಿ ಪಡೆದ ಸಚಿವರು, ಕಾಲಮಿತಿ ಹಾಕಿಕೊಂಡು ಸ್ಥಾವರಗಳ ವಾರ್ಷಿಕ ನಿರ್ವಹಣೆ ಅಥವಾ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ಘಕಗಳನ್ನು (ಆರ್ ಟಿಪಿಎಸ್ ನ ಒಂದು ಘಟಕ ಹೊರತುಪಡಿಸಿ) ಪೂರ್ಣ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಸಿದ್ಧಗೊಳಿಸಬೇಕು ಎಂದು ಸೂಚಿಸಿದರು.