ಬೆಂಗಳೂರು: ಸಕಾಲ ಕಾಯ್ದೆಯ ಅಡಿಯಲ್ಲಿ ಈಗಾಗಲೇ ಹಲವಾರು ಸೇವೆಗಳನ್ನು ಜನರಿಗೆ ಒದಗಿಸಲಾಗುತ್ತಿದೆ. ಇದರ ಜೊತೆಗೆ ಮತ್ತಷ್ಟು ಸೇವೆಗಳನ್ನು ಹೊಸದಾಗಿ ಸೇರಿಸಲಾಗಿದೆ. 130 ಹೊಸ ಸೇವೆಗಳನ್ನು ಸಕಾಲಕ್ಕೆ ಸೇರ್ಪಡೆ ಮಾಡೋದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರದಂದು ನಡೆದ “ಸಕಾಲ ಪ್ರಗತಿ ಪರಿಶೀಲನಾ ಸಭೆ”ಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಅಧೀನ ಇಲಾಖೆಗಳಾದ ಕರ್ನಾಟಕ ರಾಜ್ಯ ಶುಶ್ರೂಷೆ ಪರಿಷತ್ತು, ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿ, ಕರ್ನಾಟಕ ರಾಜ್ಯ ಶುಶ್ರೂಷೆ ಪರೀಕ್ಷಾ ಮಂಡಳಿ ಹಾಗೂ ರಾಜೀವ್ ಗಾಂದಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 130 ಹೊಸ ಸೇವೆಗಳನ್ನು ನೀಡಲು ಪ್ರಸ್ತಾವನೆ ಸಲ್ಲಿಸಿದೆ ಎಂದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ಅಧೀನ ಇಲಾಖೆಗಳಾದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಶೋಧನೆ ಮತ್ತು ತರಬೇತಿ ಇಲಾಖೆ ಈಗಾಗಲೇ 65 ಸೇವೆಗಳನ್ನು ನೀಡುತ್ತಿದ್ದು, ಹೊಸದಾಗಿ 63 ಸೇವೆಗಳನ್ನು ನೀಡಲು ಮುಂದಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈಗಾಗಲೇ 22 ಸೇವೆಗಳನ್ನು ನೀಡುತ್ತಿದ್ದು, ಹೊಸದಾಗಿ 16 ಸೇವೆಗಳನ್ನು ನೀಡಲು ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಿದರು.
ಇದೇ ರೀತಿ ಕೃಷಿ ಇಲಾಖೆ, ಪಶುಸಂಗೋಪನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಾನೂನು ಇಲಾಖೆ, ಸಾರಿಗೆ ಇಲಾಖೆ, ಒಳಾಡಳಿತ ಇಲಾಖೆ, ವಸತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಸಹಕಾರ ಇಲಾಖೆ, ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಆರ್ಥಿಕ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಯೂ ಹೊಸ ಸೇವೆಗಳ ಪ್ರಸ್ತಾವನೆ ಸಲ್ಲಿಸಿದ್ದು, 500 ಕ್ಕೂ ಹೆಚ್ಚು ಹೊಸ ಸೇವೆಗಳ ಜನರಿಗೆ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದರು.