ಯಾದಗಿರಿ : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಮೃತ ಬಾಲಕಿಯನ್ನು ಅಕ್ಷತಾ (8) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸಿದ್ದಪ್ಪ ಎಂಬುವವರ ಮನೆಯ ಅಡುಗೆ ಕೋಣೆಯ ಗೋಡೆಯು ಸಂಪೂರ್ಣವಾಗಿ ತೇವಗೊಂಡು ದುರ್ಬಲಗೊಂಡಿತ್ತು. ನಿನ್ನೆ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ಗೋಡೆ ಹಠಾತ್ತನೆ ಕುಸಿದು ಬಿದ್ದಿದೆ.
ದುರಂತದ ವಿಷಯ ತಿಳಿಯುತ್ತಿದ್ದಂತೆಯೇ ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪಂಚಾಯತ್ ಸಿಇಒ ಲವೀಶ್ ಒರಡಿಯಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪೃಥ್ವಿಕ್ ಶಂಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ ಸಾಂತ್ವನ ಹೇಳಿರುವ ಅಧಿಕಾರಿಗಳು, ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ಮಳೆಯ ಅಬ್ಬರ ಮುಂದುವರಿಯುತ್ತಿರುವುದರಿಂದ ಹಳೆಯ ಮತ್ತು ತೇವಗೊಂಡ ಮನೆಗಳಲ್ಲಿ ವಾಸಿಸುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ.








