ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಮೇ 12ರಂದು ನಡೆಯಲಿರುವ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ರಾಜ್ಯದ ಪಾಲಿಗೆ ಒಂದು ‘ಐತಿಹಾಸಿಕ ಕ್ಷಣ’ವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಸೈಕಿಯಾ ತಿಳಿಸಿದ್ದಾರೆ.
ಹಿಮಂತ ಬಿಸ್ವ ಶರ್ಮಾ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಈ ಅದ್ಧೂರಿ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.
ಗುವಾಹಟಿಯ ಖಾನಾಪಾರಾದ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಮೇ 12ರಂದು ಬೆಳಿಗ್ಗೆ 11 ಗಂಟೆಗೆ ಸಮಾರಂಭ ನಡೆಯಲಿದೆ. ಪ್ರಧಾನಿ ಮೋದಿ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮನೆಮಾಡಿದೆ.
ಸ್ಪಷ್ಟ ಬಹುಮತ: 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಅಭೂತಪೂರ್ವ ಯಶಸ್ಸು ಸಾಧಿಸಿದೆ.








