ನವದೆಹಲಿ: ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಶನಿವಾರ ಮುಂಜಾನೆ ಬಸ್ಸೊಂದು ಕಂಟೈನರ್ ಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾದ ಪರಿಣಾಮ ಒಂದು ಮಗು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಕಂಟೇನರ್ಗೆ ಡಿಕ್ಕಿ ಹೊಡೆದಿದೆ ಮತ್ತು ಕೆಲವೇ ನಿಮಿಷಗಳಲ್ಲಿ ಬೆಂಕಿಗೆ ಆಹುತಿಯಾಗಿದೆ. ಪೊಲೀಸರ ಪ್ರಕಾರ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ‘ಸ್ಲೀಪರ್’ ಕೋಚ್ ಆಗಿರುವ ಖಾಸಗಿ ಬಸ್ ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎನ್ನಲಾಗಿದೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ನಾಸಿಕ್ ಪೊಲೀಸರು ಘಟನೆಯಲ್ಲಿ ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಶವಗಳು ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ವೈದ್ಯರ ದೃಢೀಕರಣದೊಂದಿಗೆ ಸಾವಿನ ನಿಖರ ಸಂಖ್ಯೆಯನ್ನು ಕಂಡುಹಿಡಿಯಲು ನಾವು ಇನ್ನೂ ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.