ಬೆಳಗಾವಿ : ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಲಿಂಗಾಯತ ಪಂಚಮಸಾಲಿ ಹೋರಾಟಗಾರರನ್ನು ಪೊಲೀಸರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಮತ್ತು ರಾಜ್ಯ ಸರ್ಕಾರದ ವಿರುದ್ಧ ಪಂಚಮಸಾಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ವೇಳೆ ಕಳೆದ ವರ್ಷ ಡಿಸೆಂಬರ್ 10 ರಂದು ನಡೆದಿದ್ದ ಲಾಠಿಚಾರ್ಜ್ ಘಟನೆ ಖಂಡಿಸಿ ಲಿಂಗಾಯತ ಪಂಚಮಸಾಲಿ ದೌರ್ಜನ್ಯ ದಿನಾಚರಣೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು.
ನಗರದ ಗಾಂಧಿ ಭವನದಿಂದ ಸುವರ್ಣ ವಿಧಾನಸೌಧವರೆಗೆ ಮೌನ ಪ್ರತಿಭಟನಾ ರ‍್ಯಾಲಿ ಉದ್ದೇಶಿಸಲಾಗಿತ್ತು. ಈ ವೇಳೆ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿ.ಸಿ. ಪಾಟೀಲ್, ಅರವಿಂದ ಬೆಲ್ಲದ, ಸಿದ್ದು ಸವದಿ, ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಸೇರಿ ಅನೇಕರು ಭಾಗಿಯಾಗಿದ್ದರು.








