ಬೆಂಗಳೂರು : ಇನ್ನೇನು ನಾಳೆನೇ ಹೊಸ ವರ್ಷಕ್ಕೆ ಇಡೀ ಜಗತ್ತೇ ಕಾಯುತ್ತಿದೆ ಈ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದಲೇ ಎಲ್ಲಾ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.
ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಯುವಜನತೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ಈಗಾಗಲೇ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದ್ದು, ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಕೆಲವರು ಹೊಸ ವರ್ಷ ಹಿನ್ನೆಲೆಯಲ್ಲಿ ಕೆಲವು ಪ್ರವಾಸಿ ತಾಣಗಳಿಗೆ ಭೇಟಿ ಕೊಡುತ್ತಾರೆ.
ಈ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ ಡಿಸೆಂಬರ್ 31 ಸಂಜೆ 6 ಗಂಟೆಯಿಂದ ಜನವರಿ 1 ಬೆಳಗ್ಗೆ 6 ಗಂಟೆಯವರೆಗೂ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಶ್ರೀರಾಮದೇವರ ಬೆಟ್ಟ, ಸಂಗಮ, ಮೇಕೆದಾಟು, ಚುಂಚಿಫಾಲ್ಸ್ ಪ್ರದೇಶಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ ಆದೇಶ ಹೊರಡಿಸಿದ್ದಾರೆ.








