ಬೆಳಗಾವಿ:ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದ್ದ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕಲ್ಲಪ್ಪ ಅಲಿಯಾಸ್ ಕಲ್ಯಾಣಿ ಮೋರೆ(44) ಬಂಧಿತ ಆರೋಪಿಯಾಗಿದ್ದಾನೆ.
ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿ ಬೆಳೆಯಲಾಗಿದ್ದ ಹೂ ಕಿತ್ತರೂ ಎಂಬ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿತ್ತು.
ಸುಗಂಧಾ ಮೋರೆ(50) ಎಂಬ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ನಡೆದಿದೆ. ಮನೆ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಅಂಗನವಾಡಿ ಸಹಾಯಕಿಯ ಮೂಗನ್ನೇ ಕಟ್ ಮಾಡಿದ್ದಾನೆ.ಅಂಗನವಾಡಿ ಸಹಾಯಕಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.