ಬೆಂಗಳೂರು : ಬಿಸಿಲಿನ ಶಾಖದಿಂದ ಹಾಗೂ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ವರುಣನ ಆಗಮನದಿಂದ ಜನರು ನಿರಾಳವಾಗಿದ್ದಾರೆ. ಕಳೆದ ಹಲವು ದಿನಗಳಿಂದ ಬೆಂಗಳೂರು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದ್ದು ರೈತರಲ್ಲೂ ಕೂಡ ಸಂತಸ ಮೂಡಿಸಿದೆ ಇದೀಗ ನಾಳೆಯಿಂದ ಮೂರು ದಿನಗಳ ಕಾಲ ಬೆಂಗಳೂರು ಸೇರಿ ರಾಜದ ಹಲವಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ ಸೋಮವಾರದಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿದ್ದು, ತಂಪಾದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ. ಅದರಲ್ಲೂ ಮೇ 7 ಮತ್ತು 8ರಂದು ಮಳೆ ಪ್ರಮಾಣ ಹೆಚ್ಚಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆದರೂ, ಮುಂದಿನ ಮೂರು ದಿನಗಳ ಕಾಲ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಷಿಯಸ್ ಹಾಗೂ ಕನಿಷ್ಠ 24-25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.