ಬೆಂಗಳೂರು : ರಸ್ತೆ ವಿಭಜಕ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಮೃತಪಟ್ಟಿರುವ ಘಟನೆ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಡುಗೋಡಿ ನಿವಾಸಿ ನರೇಂದ್ರ (47) ಮೃತ ವ್ಯಕ್ತಿ. ಬಿಬಿಎಂಪಿ ಕಸ ಸಂಗ್ರಹಿಸುವ ವಾಹನ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ನರೇಂದ್ರ, ಶುಕ್ರವಾರ ಕೆಲಸ ಮುಗಿಸಿ ಮಧ್ಯಾಹ್ನ 12.30ರ ಸುಮಾರಿಗೆ ಹೊಸೂರು ರಸ್ತೆಯ ಕಿದ್ವಾಯಿ ಆಸ್ಪತ್ರೆ ಬಳಿ ರಸ್ತೆ ವಿಭಜಕ ದಾಟುವಾಗ ಡೈರಿ ಸರ್ಕಲ್ ಕಡೆಯಿಂದ ಬಂದ ಖಾಸಗಿ ಬಸ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಸ್ಥಳೀಯರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆಗೆ ತೀವ್ರ ಪೆಟ್ಟುಬಿದ್ದು ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಸಂಜೆ 5.30ರ ಸುಮಾರಿಗೆ ಮೃತಪಟ್ಟಿದ್ದಾನೆ.
ನರೇಂದ್ರ ಬಳ್ಳಾರಿ ಮೂಲದವನಾಗಿದ್ದು, ಆಡುಗೋಡಿಯಲ್ಲಿ ತಂಗಿ ಮನೆಯಲ್ಲಿ ನೆಲೆಸಿದ್ದ. ಬಿಬಿಎಂಪಿ ಕಸ ಸಂಗ್ರಹಿಸುವ ವಾಹನದ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಘಟನೆ ಸಂಬಂಧ ಖಾಸಗಿ ಬಸ್ ಜಪ್ತಿ ಮಾಡಿದ್ದು, ಅದರ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.ನರೇಂದ್ರನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.