ಮಂಡ್ಯ : ಮದ್ದೂರು ತಾಲೂಕಿನ 42 ಗ್ರಾಮ ಪಂಚಾಯಿತಿಗಳ ಪೈಕಿ ಭಾರತೀನಗರ ( ಕೆ.ಎಂ.ದೊಡ್ಡಿ ) ಗ್ರಾಮ ಪಂಚಾಯಿತಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ.
ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳಲ್ಲೂ ಸರ್ವತೋಮುಖ ಅಭಿವೃದ್ಧಿ, ಆರ್ಥಿಕ ಶಿಸ್ತು, ನೈರ್ಮಲ್ಯ ನಿರ್ವಹಣೆಯೊಂದಿಗೆ ಹಲವಾರು ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಉತ್ತಮ ಆಡಳಿತ ಮತ್ತು ಕಾರ್ಯಸಾಧನೆ ಮಾಡಿರುವ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಸರ್ಕಾರ ನೀಡುವ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ.
ಗ್ರಾಮ ಪಂಚಾಯಿತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಉದ್ದೇಶದಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಗ್ರಾಮ ಪಂಚಾಯಿತಿಗಳನ್ನು ಪ್ರೋತ್ಸಾಹಿಸಲು 2013–14ನೇ ಸಾಲಿನಿಂದ ಪ್ರತಿ ತಾಲ್ಲೂಕಿಗೆ ಒಂದು ಗ್ರಾಮ ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತಿದ್ದು, ಹೀಗಾಗಿ 2023-24 ನೇ ಸಾಲಿನಲ್ಲಿ ಮದ್ದೂರು ತಾಲೂಕಿನ ಭಾರತೀನಗರ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಸೋಮವಾರ ವಿಧಾನಸೌಧದ ಬ್ಯಾಂಕೇಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷರಾದ ಅನಿತಾ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಪ್ರೋತ್ಸಾಹ ಧನ ನೀಡಿ ಗೌರವಿಸಿದರು.
ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮದ್ದೂರು ತಾಲೂಕಿನಿಂದ ಮೂರು ಗ್ರಾಪಂಗಳನ್ನು ಆರಂಭದಲ್ಲಿ ಗುರುತಿಸಲಾಗಿತ್ತು. ಅಂತಿಮವಾಗಿ ಆಯಾಯ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಶುದ್ಧ ನೀರು, ಸ್ವಚ್ಛತೆ, ದಾಖಲು ನಿರ್ವಹಣೆ, ತೆರಿಗೆ ಸಂಗ್ರಹ, ಬೀದಿ ದೀಪ ನಿರ್ವಹಣೆ ಹೀಗೆ ಹಲವಾರು ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಹಾಗೂ ಕೈಗೊಂಡಿರುವ ಅಭಿವೃದ್ಧಿ, ಯೋಜನೆ ಅನುಷ್ಠಾನಗಳ ಪ್ರಗತಿ ಅವಲೋಕಿಸಿ ನಿರ್ದಿಷ್ಟ ಮಾನದಂಡಗಳ ಅಂಕಗಳಿಕೆಯನ್ನಾಧರಿಸಿ ಪ್ರತಿ ತಾಲೂಕಿನಿಂದ ಒಂದೊಂದು ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಜಿಪಂ ಸಿಇಒ ಅಧ್ಯಕ್ಷತೆಯ ಸಮಿತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಶಿಫಾರಸು ಮಾಡಿತ್ತು. ಅದರಂತೆ ಮದ್ದೂರು ತಾಲೂಕಿನ ಭಾರತೀನಗರ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ ಎಂದು ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ರಾಮಲಿಂಗಯ್ಯ ತಿಳಿಸಿದರು.
ವರದಿ : ಗಿರೀಶ್ ರಾಜ್, ಮಂಡ್ಯ








