ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹಾಗಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳ ಜೊತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರಿನ ಕಮಿಷನರ್ ಬಿ ದಯಾನಂದ್ ಮಾಹಿತಿ ನೀಡಿದರು.
ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು, 26 ಜನವರಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬೆಳಿಗ್ಗೆ 9 ಗಂಟೆಗೆ ರಾಜ್ಯಪಾಲರಿಂದ ಧ್ವಜಾರೋಹಣ ನಡೆಯಲಿದ್ದು ಯಾವುದೇ ಸಮಸ್ಯೆಯಾಗದಂತೆ ರಾಜೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರದ ಎಲ್ಲಾ ವಿಭಾಗಗಳಿಂದ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ. 8ಡಿಸಿಪಿ, 7ಸಿಪಿ, 44ಪಿಐ, 114 ಪಿಎಸ್ಐ, 185 ಎಎಸ್ಐ, 80 ಮಹಿಳಾ ಸಿಬ್ಬಂದಿ 30 ಕ್ಯಾಮೆರಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
10 ಕೆ.ಎಸ್.ಆರ್.ಪಿ ತುಕಡಿ 2 ಅಗ್ನಿಶಾಮಕ ವಾಹನ, ಕ್ಷೀಪ್ರಕಾರ್ಯ ಪಡೆ, ಭದ್ರತೆಗಾಗಿ ಒಟ್ಟು 1,051 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮೈದಾನದ ಸುತ್ತಮುತ್ತ 103 ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಕೆ ಮಾಡಲಾಗಿದೆ. ಕಲರ್ ಕೋಡ್ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ವರಿಗೆ ಪಿಂಕ್ ಬಣ್ಣದ ಪಾಸ್ ವಿತರಣೆ ಮಾಡಲಾಗುತ್ತದೆ.
ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ವಿಐಪಿ ಗೇಟ್ 2ರಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಪಿಂಕ್ ಬಣ್ಣದ ಸೇರುವವರಿಗೆ ವಿಐಪಿ ಗೇಟ್ 2ರಲ್ಲಿ ಪ್ರವೇಶ ಕಲ್ಪಿಸಲಾಗುತ್ತದೆ. ಮುಖ್ಯ ಅತಿಥಿ ಗಣ್ಯರಿಗೆ ಗೇಟ್ 3ರಲ್ಲಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ವೈಟ್ ಪಾಸ್ ಮಾಧ್ಯಮ ಪ್ರತಿನಿಧಿಗಳಿಗೆ ಗೇಟ್ 4ರಲ್ಲಿ ಪ್ರವೇಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಹೇಳಿಕೆ ನೀಡಿದರು.