ಮೈಸೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಸಾಲ ಕಟ್ಟಲಾಗದೇ ಖಿನ್ನತೆಯಿಂದ ಮಹಿಳೆಯೊಬ್ಬರು ವಿಷದ ಮಾತ್ರೆ ಕುಡಿದು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಜಯಶೀಲ (53) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಐಎಫ್ ಎಲ್, ಪೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಗಳಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಣೆಗೆ ಸುಮಾರು 5 ಲಕ್ಷ ರೂ. ಸಾಲ ಪಡೆದಿದ್ದರು ಎನ್ನಲಾಗಿದೆ. ಪ್ರತಿ ತಿಂಗಳು 20 ಸಾವಿರ ರೂ. ಗೂ ಹೆಚ್ಚು ಕಂತು ಕಟ್ಟಬೇಕಿತ್ತು. ಸಾಲದ ಮೇಲೆ ಖರೀದಿಸಿದ್ದ ಹಸು ಮೃತಪಟ್ಟಿತ್ತು.
ಹಸು ಮೃತಪಟ್ಟ ಹಿನ್ನೆಲೆಯಲ್ಲಿ ಖಿನ್ನತೆಗೊಂಡು ಮಹಿಳೆ ಜಯಶೀಲ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಒದ್ದಾಡುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡುವಷ್ಟರಲ್ಲಿ ಜಯಶೀಲ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.