ಬೆಂಗಳೂರು : ರಾಜ್ಯದ ಒಳಗೆ ಮತ್ತು ನೆರೆಯ ರಾಜ್ಯಗಳಲ್ಲಿಯೂ ಅತಿಯಾದ ಮಳೆ ಸುರಿಯುತ್ತಿದ್ದು, ರಾಜ್ಯದ ಯಾವುದೇ ಮೂಲೆಯಲ್ಲಿ ಸಮಸ್ಯೆ ತಲೆದೋರಿದರೂ ಅದನ್ನು ಎದುರಿಸಲು ಸಕಲ ತಯಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.
ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಸಿದ್ಧರಿರುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಬಗ್ಗೆ ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.
ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.