ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗಿದ್ದು, ಮುಂದಿನ ಮೂರು ದಿನ ರಾಜ್ಯಾದ್ಯಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ವರೆಗೆ ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ 2-4 ಡಿಗ್ರಿ ಸೆಲ್ಸಿಯಸ್ ವರೆಗೆ ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆ ಆಗುವ ಸಾಧ್ಯತೆ ಇದ್ದು, ಬೆಳಗಿನ ಜಾವ ಮತ್ತು ರಾತ್ರಿಯ ವೇಳೆ ಮಂಜು ಮುಸುಕಿದ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಾಮರಾಜನಗರ, ಬೀದರ್, ವಿಜಯಪುರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಭಾಗದಲ್ಲಿ ಕನಿಷ್ಠ ಉಷ್ಣಾಂಶ ವಾಡಿಕೆಯ ಪ್ರಮಾಣಕ್ಕಿಂತ 2-4 ಡಿಗ್ರಿಯಷ್ಟು ಇಳಿಕೆಯಾಗುತ್ತದೆ.
ಬೆಂಗಳೂರಿನಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಾಡಿಕೆಗಿಂತ 2 ರಿಂದ 3 ಡಿ.ಸೆ.ನಷ್ಟು ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ 11 ಡಿ.ಸೆ. ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ.