ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿದೆ ಆ ಮೂಲಕ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು ಒಂದು ವೇಳೆ ತನಿಖೆಯಲ್ಲಿ ತಪ್ಪು ಕೊಂಡು ಬಂದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.
ಇಂದು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ಹೋರಾಟಕ್ಕೆ ಅರ್ಥವಿಲ್ಲ. ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ ಅಷ್ಟೇ. ತನಿಖೆಯಾಗಲಿ. ತಪ್ಪು ಕಂಡುಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅವರು ನಗರದಲ್ಲಿ ಪ್ರತಿಕ್ರಿಯೆ ನೀಡಿದರು.
ಆದರೆ ಕಾಂಗ್ರೆಸ್ ಹೈ ಕಮಾಂಡ್ ಹಾಗೂ ರಾಜ್ಯದ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.ಕಾನೂನು ಹೋರಾಟ ಮಾಡುತ್ತೇವೆ.ಮುಡಾ ಪ್ರಕರಣ ತನಿಖೆ ಸಮಗ್ರವಾಗಿ ಆಗಲಿ. ಅಲ್ಲಿಯವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಎಲ್ಲ ಶಾಸಕರದ್ದು, ಹೈಕಮಾಂಡ್‌ನದ್ದು ಕೂಡ ಇದೇ ಆಗ್ರಹವಾಗಿದೆ ಎಂದರು.