ಹಾವೇರಿ : ರಾಜ್ಯದಲ್ಲಿ ಮುಂದಿನ ತಿಂಗಳು ನವೆಂಬರ್ 13 ರಂದು ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ನಾಳೆ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಿಸಲಾಗುತ್ತೆ ಎಂದು ಕಾನೂನು ಸಚಿವ HK ಪಾಟೀಲ್ ತಿಳಿಸಿದರು.
ಇಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾಳೆ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಲಿದೆ.ಅಭ್ಯರ್ಥಿ ಆಯ್ಕೆ ಸಂಬಂಧ ಸಿಇಸಿ ಮೀಟಿಂಗ್ ನಡೆಯುತ್ತಿದೆ ಎಂದು ತಿಳಿಸಿದರು.
ಅಜ್ಜಂಪೀರ ಖಾದ್ರಿ ಹಾಗೂ ಯಾಸೀರಖಾನ್ ಪಠಾಣ್ ಇಬ್ಬರನ್ನೂ ಕೂರಿಸಿ ಚರ್ಚೆ ಮಾಡುತ್ತೇವೆ. ಅವರಲ್ಲಿ ಒಬ್ಬರಿಗೆ ಟಿಕೆಟ್ ಕೊಡುತ್ತೇವೆ. ಇಲ್ಲದಿದ್ದರೆ ಅವರು ಸೂಚಿಸಿದವರಿಗೆ ನೀಡುತ್ತೇವೆ. ಹೈಕಮಾಂಡ್ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕಾರ್ಯಕರ್ತರ ಅಭಿಪ್ರಾಯ, ನಾಯಕರ ಶಿಫಾರಸು ಹಾಗೂ ಶಾಸಕರ ಅಭಿಪ್ರಾಯ ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಇಂದು ರಾತ್ರಿ ಅಥವಾ ನಾಳೆ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದರು.