ಬೆಂಗಳೂರು : ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕುರಿತು ವಿಧೇಯಕದ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಪೂರ್ಣ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡಿಗರಿಗೆ ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕದ ಬಗ್ಗೆ ಸಚಿವ ಸಂಪುಟದಲ್ಲಿ ಸಮಗ್ರವಾದ ಚರ್ಚೆ ಇನ್ನೂ ನಡೆದಿಲ್ಲ. ಮತ್ತೆ ಸಂಪುಟದ ಮುಂದಿಟ್ಟು ಕೂಲಂಕಷವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಕೊಂಚ ಗೊಂದಲ ಉಂಟಾಗಿತ್ತು, ಮುಂದಿನ ದಿನಗಳಲ್ಲಿ ಈ ಗೊಂದಲಗಳನ್ನು ನಿವಾರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಅಂತ ತಿಳಿಸಿದ್ದಾರೆ.