ಬೆಂಗಳೂರು : ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆ ನೀಡಿ ಚುನಾವಣಾ ನೀತಿ ಸಂಹಿತೆ ಉಲ್ಲಘನೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ನಿನ್ನೆ ವಿಚಾರಣಾ ನ್ಯಾಯಾಲಯದ ಸಮನ್ಸ್ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕ ಸದಸ್ಯಪೀಠ ಈ ಮಧ್ಯಂತರ ಆದೇಶ ನೀಡಿದೆ. ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಕೀಲರು, ಚುನಾವಣೆಯಲ್ಲಿ ಪ್ರತಿಸ್ಪರ್ಧಿಯ ಹೆಸರನ್ನು ಅರ್ಜಿದಾರರು ತಮ್ಮ ಹೇಳಿಕೆಯಲ್ಲಿ ಎಲ್ಲೂ ಉಲ್ಲೇಖಿಸಿಲ್ಲ. ಆದರೂ ಕೋರ್ಟ್ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿಗೊಳಿಸಿದೆ. ಹಾಗಾಗಿ ಸಮನ್ಸ್ಗೆ ತಡೆ ನೀಡಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ ಈ ಆದೇಶ ನೀಡಿದೆ.
ಅಲ್ಲದೇ, ನಗರದ 42 ನೇ ಎಸಿಜೆಎಂ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆ ಮತ್ತು ಆ ಸಂಬಂಧದ ಎಲ್ಲಾ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ನೀಡಿತು. ರಾಜ್ಯ ಸರಕಾರ ಮತ್ತು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜನವರಿ ತಿಂಗಳ ಮೂರನೇ ವಾರಕ್ಕೆ ಮುಂದೂಡಿತು.








