ಬೆಂಗಳೂರು : ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 18ಕ್ಕೂ ಅಧಿಕ ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿನ್ನೆ ಹೈ ಕೋರ್ಟ್ ನಲ್ಲಿ ಸಿಬಿಐ ಸಂಪೂರ್ಣ ವಸ್ತುಸ್ಥಿತಿ ವರದಿ ಸಲ್ಲಿಸಿದಾಗ ಎಲ್ಲವೂ ಬೆಳಕಿಗೆ ಬರಲಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.
ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಆದೇಶಿಸಬೇಕು ಎಂದು ಕೋರಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಸಿಬಿಐ ಪರ ವಕೀಲರು, ಜ.15ರವರೆಗಿನ ತನಿಖೆಗೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ದಳ (ಎಸ್‌ಐಟಿ) ಪತ್ತೆ ಮಾಡದ ಹಲವು ಬ್ಯಾಂಕ್ ಖಾತೆಗಳನ್ನು ಸಿಬಿಐ ಪತ್ತೆ ಮಾಡಿದೆ ಎಂದರು.ಆಗ ತನಿಖಾ ವರದಿ ಪರಿಶೀಲಿಸಿದ ನ್ಯಾಯಪೀಠ, ಪ್ರಕರಣದ ಮೇಲೆ ನ್ಯಾಯಾಲಯ ನಿಗಾ ಇರಿಸಿದೆ. ಸಂಪೂರ್ಣ ಸ್ಥಿತಿಗತಿ ವರದಿ ಬರಲಿ. ಎಲ್ಲವೂ ಬೆಳಕಿಗೆ ಬರಲಿ ಎಂದು ಮೌಖಿಕವಾಗಿ ನುಡಿಯಿತು. ನಂತರ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ಫೆ.20ಕ್ಕೆ ಮುಂದೂಡಿತು.