ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಭಾರೀ ಮಳೆ, ಸಿಡಿಲಿಗೆ ಯಾದಗಿರಿಯಲ್ಲಿ ನಾಲ್ವರು ಬಲಿಯಾಗಿದ್ದಾರೆ.
ಸೋಮವಾರ ಸುರಿದ ದಿಢೀರ್ ಮಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ವಸ್ಥಗೊಂಡಿದ್ದು, ಯಾದಗಿರಿಯಲ್ಲಿ ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ. ಅವರಲ್ಲಿ ಮೂವರು ಒಂದೇ ಕುಟುಂಬದವರು. ಜೀನಕೇರಾ ತಾಂಡದಲ್ಲಿ ಸಿಡಿಲು ಬಡಿದು ಜೇನು (22), ಕಿಶನ್ (30), ಸುಮಿ ಬಾಯಿ (30) ಹಾಗೂ ನೇನು (18) ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 23 ರ ಇಂದು ಸೆ.24 ನಾಳೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀಈ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ನಾಳೆ, ನಾಡಿದ್ದು ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಬೀದರ್ ಮತ್ತು ಬಾಗಲಕೋಟೆಯಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣಮಳೆಯಾಗಲಿದೆ.