ಬೆಂಗಳೂರು : ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.
ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.