ಬೆಳಗಾವಿ : ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಿದೆ.
ವಿಧಾನಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಮಂಡಿಸಿದರು. ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ, ಕೋಮುಗಲಭೆ, ಕಾನೂಜು ಸುವ್ಯವಸ್ಥೆ ಹದಗೆಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕ ತಂದಿದೆ.
ದ್ವೇಷ ಭಾಷಣ ಎಂದರೇನು?
ಯಾವುದೇ ವ್ಯಕ್ತಿ ಪೂರ್ವಕಲ್ಪಿತ ಹಿತಾಸಕ್ತಿಯನ್ನು ಸಾಧಿಸುವ ಉದ್ದೇಶದಿಂದ ಬದುಕಿರುವ ವ್ಯಕ್ತಿ ಅಥವಾ ಮೃತ ವ್ಯಕ್ತಿಗಳ ವರ್ಗ ಅಥವಾ ಗುಂಪು ಅಥವಾ ಸಮುದಾಯದ ವಿರುದ್ಧ ಹಾನಿ, ಅಸಾಮರಸ್ಯ ಅಥವಾ ವೈರತ್ವ ಅಥವಾ ದ್ವೇಷದ, ಕೆಡುಕಿನ ಭಾವನೆ ಮೂಡಿಸುವ ಉದ್ದೇಶದೊಂದಿಗೆ ಸಾರ್ವಜನಿಕ ನೋಟದಲ್ಲಿ ಮೌಖಿಕವಾಗಿ, ಲಿಖಿತ ರೂಪದ ಪದದಲ್ಲಿ ಅಥವಾ ಸಂಕೇತಗಳ ಮೂಲಕ ಅಥವಾ ದೃಶ್ಯರೂಪಕಗಳ ಮೂಲಕ ಅಥವಾ ವಿದ್ಯುನ್ಮಾನ ಸಂವಹನಗಳ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಮಾಡಲಾದ, ಪ್ರಕಟಿಸಲಾದ ಯಾವುದೇ ಮಾತು ದ್ವೇಷ ಭಾಷಣವಾಗಲಿದೆ.








