ಬೆಂಗಳೂರು: ರಾಜ್ಯದ 330 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಗ್ರಾಮೀಣ ಓದುಗರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ 5,633 ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯ್ತಿಗಳಿಗೆ ವರ್ಗಾಯಿಸಲಾಗಿರುತ್ತದೆ ಎಂದಿದ್ದಾರೆ.
ರಾಜ್ಯದ ಪ್ರಸ್ತುತ 5,954 ಗ್ರಾಮ ಪಂಚಾಯ್ತಿಗಳಿದ್ದು, 5575 ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆರ್ಥಿಕ ಇಲಾಖೆಯು 330 ಗ್ರಾಮ ಪಂಚಾಯ್ತಿಗಳಲ್ಲಿ ಲಭ್ಯವಿರುವ ಕಟ್ಟಡಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಮಂಜೂರು ಮಾಡಲು ಸಹಮತಿ ನೀಡಿರುತ್ತದೆ ಎಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ರಾಜ್ಯದ 330 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲು ಆದೇಶಿಸಿದ್ದಾರೆ.