ಬೆಂಗಳೂರು: ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ. ಒಕ್ಕೂಟಗಳ ನಂದಿನಿ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ ಸಿದ್ಧರಾಮಯ್ಯ ಅವರು, ಸಚಿವ ಸಂಪುಟಕ್ಕೆ ವಿಷಯ ರವಾನೆ ಮಾಡಿ, ಸಂಪುಟ ಸಭೆಯಲ್ಲಿ ಚರ್ಚಿಸಿ ಆ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳುವಂತ ನಿರ್ಣಯವನ್ನು ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು:
• ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.
• ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ.
• ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು.
*ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸಿಎಂ ಸೂಚಿಸಿದರು.
• ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಅವರು ಹೇಳಿದರು.
• ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ.
• ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಳಿಂದ ಮನವಿ ಮಾಡಲಾಯಿತು. ಆದರೇ ಇದಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಲ್ಲ.