ಬೆಂಗಳೂರು : ಬೆಂಗಳೂರು ಹಸಿರು ಮಾರ್ಗದ ಕೊನೆಯ ನಿಲ್ದಾಣವಾಗಿರುವ ಮಾದಾವರದಿಂದ ತುಮಕೂರುವರೆಗೆ ನಮ್ಮ ಮೆಟ್ರೋ ಯೋಜನೆ ವಿಸ್ತರಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಇದರ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಕೆಲಸ ಪೂರ್ಣಗೊಂಡಿದ್ದು, ಅದು ಸರ್ಕಾರದ ಕೈ ಸೇರಿದೆ. ಬೆಂಗಳೂರು ನಂತರ ತುಮಕೂರು ಬೆಳವಣಿಗೆಗೆ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ ಶೀಘ್ರವೇ ಮೆಟ್ರೋ ಯೋಜನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.
ಬೆಂಗಳೂರು ನಮ್ಮ ಮೆಟ್ರೋ ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆಯ ಡಿಪಿಆರ್ ವರದಿ ಸ್ವೀಕರಿಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಈ ವರದಿಯನ್ನು ಸಚಿವ ಸಂಪುಟ ಸಭೆಗೆ ತೆಗೆದುಕೊಂಡು ಹೋಗಲಾಗುವುದು. ಈ ಬಗ್ಗೆ ಕ್ಯಾಬಿನೆಟ್ನಲ್ಲಿ ಸಂಪೂರ್ಣವಾಗಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಬಿಎಂಆರ್ಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ರೇಷ್ಮೆ ಸಂಸ್ಥೆ-ಮಾದಾವರವರೆಗೆ ಮೆಟ್ರೋ ಹಸಿರು ಮಾರ್ಗ ಕಾರ್ಯ ನಿರ್ವಹಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ಮಾದಾವರ ನಿಲ್ದಾಣದಿಂದ 59 ಕಿಲೋ ಮೀಟರ್ ದೂರದ ತುಮಕೂರುವರೆಗೆ ವಿಸ್ತರಣೆಗೆ ಸರ್ಕಾರ ಯೋಜನೆ ರೂಪಿಸಿದೆ. ನೆಲಮಂಗಲ, ದಾಬಾಸಪೇಟೆ, ಕ್ಯಾತಸಂದ್ರ ಮೂಲಕ ತುಮಕೂರು ತನಕ ಅಂದಾಜು 20,600 ಕೋಟಿ ರೂ. ವೆಚ್ಚದಲ್ಲಿ ಮೆಟ್ರೋ ವಿಸ್ತರಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಮುಂದೆ ಅಂದಾಜುವೆಚ್ಚ ಹೆಚ್ಚಾಗುವ ನಿರೀಕ್ಷೆ ಇದೆ.








