ವಿಜಯಪುರ : ರೈತರ ಪರಿಹಾರದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಂಡಿರುವ ಬಗ್ಗೆ ದೂರುಗಳು ಬಂದಿರುವುದರಿಂದ ತಕ್ಷಣ ಮರುಪಾವತಿಸುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದ್ದಾರೆ.
ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ ಅವರು, ಕರ್ನಾಟಕ ಸರ್ಕಾರ ಜಿಲ್ಲೆಯ ರೈತರಿಗೆ ಬರ ಪರಿಹಾರವಾಗಿ 36010.20 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇದು ರೈತರ ಬರ ಪರಿಹಾರ ಹಣವಾಗಿರುತ್ತದೆ. ರಾಜ್ಯ ಸರ್ಕಾರದಿಂದ ನೇರವಾಗಿ ರೈತರ ಖಾತೆಗಳಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿದೆ. ಇದನ್ನು ರೈತರ ಸಾಲದ ಖಾತೆಗೆ ಜಮೆ ಮಾಡಿಕೊಳ್ಳಬಾರದು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ವಿಜಯಪುರ ಸಹಕಾರ ಸಂಘಳ ಇಲಾಖೆಯ ಉಪ ನಿಬಂಧಕರಿಗೆ ಸೂಚಿಸಲಾಗಿದೆ. ಆದಾಗ್ಯೂ ಸಾಲದ ಖಾತೆಗಳಿಗೆ ಪರಿಹಾರದ ಹಣ ಜಮೆ ಮಾಡಿಕೊಂಡಿರುವುದು ಕಂಡು ಬಂದಿದೆ. ಹಾಗಾಗಿ ಕಡಿತಗೊಳಿಸಿದ ಹಣವನ್ನು ತಕ್ಷಣ ಮರುಪಾವತಿಸಬೇಕು. ಇಲ್ಲದಿದ್ದಲ್ಲಿ ಬ್ಯಾಂಕ್‌ಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರನ್ವಯ ಮತ್ತು ಇತರ ಕಾಯ್ದೆಯಡಿಯಲ್ಲಿ ಕ್ರಮ ಜರಗಿಸಲಾಗುವು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರ ಸಹಮತ ಪಡೆಯದೇ ಅವರ ಬರ ಪರಿಹಾರ ಹಣವನ್ನು ಅವರ ಸಾಲದ ಖಾತೆಗೆ ಜಮೆ ಮಾಡಿಕೊಂಡರೆ ಆಯಾ ಬ್ಯಾಂಕ್ ಮುಖ್ಯಸ್ಥರನ್ನು ಮತ್ತು ಶಾಖಾ ವ್ಯವಸ್ಥಾಪಕರನ್ನು ಜವಾಬ್ದಾರನ್ನಾಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ಸರಕಾರದಿಂದ ಬಿಡುಗಡೆಯಾದ ಯಾವುದೇ ತರಹದ ಪ್ರೋತ್ಸಾಹದ ಧನವನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡದೆ ಗ್ರಾಹಕರ ಅನುಕೂಲ ಮಾಡಿಕೊಡಬೇಕು. ಹಾಗೂ ಅವರ ಜೊತೆ ಸಂಯಮದಿAದ ವರ್ತಿಸಬೇಕು. ತಾಂತ್ರಿಕ ಸಮಸ್ಯೆ ಇದ್ದರೆ ಗ್ರಾಹಕರಿಗೆ ಸರಿಯಾದ ತಿಳುವಳಿಕೆ ನೀಡಿ ಮಾರ್ಗದರ್ಶನ ಮಾಡಬೇಕು ಮತ್ತು ಅವರ ಸಮಸ್ಯೆಯನ್ನು ಬೇಗನೆ ಪರಿಹರಿಸಬೇಕು ಎಂದು ಸೂಚಿಸಿದ್ದಾರೆ.