ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಿಗೆ ಯುಜಿಸಿ ಮಾನದಂಡ ಅನುಸರಿಸಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಝ್ಯ ಸರ್ಕಾರ ನಿರ್ಧರಿಸಿದ್ರೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ 5,000 ಅತಿಥಿ ಉಪನ್ಯಾಸಕರು ನೇಮಕಾತಿಗೆ ಅನರ್ಹರಾಗಲಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೊದಲು ಯುಜಿಸಿ ನಿಯಮಾವಳಿ 2018 ರ ಅಡಿಯಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಸಂಪೂರ್ಣವಾಗಿ ಪಾಲಿಸುವಂತೆ ಕರ್ನಾಟಕ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.
ಎಚ್.ಸಂಜೀವಯ್ಯ ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಆರ್.ನಟರಾಜ್ ಈ ನಿರ್ದೇಶನ ನೀಡಿದ್ದಾರೆ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್ಇಟಿ) / ರಾಜ್ಯ ಅರ್ಹತಾ ಪರೀಕ್ಷೆ (ಎಸ್ಇಟಿ) / ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) / ಪಿಎಚ್ಡಿ ವಿದ್ಯಾರ್ಹತೆ ಹೊಂದಿರುವವನ್ನು ಮಾತ್ರ ನೇಮಕಾತಿ ಮಾಡಿಕೊಳ್ಳಲು ಹೈಕೋರ್ಟ್ ಸೂಚನೆ ನೀಡಿದೆ.