ಬೆಂಗಳೂರು : ನಾಳೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು, ಕರಾವಳಿ ಮತ್ತು ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರ ಮಳೆಯನ್ನು ಅಂದಾಜಿಸಲಾಗಿದೆ. ಮುಂದಿನ ಕೆಲ ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು ನಾಳೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಸುಮಾರು 12 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಬಿಸಿಲು ಮತ್ತು ಮಳೆಯ ಮಿಶ್ರ ಹವಾಮಾನ ಕಂಡುಬರಲಿದೆ. ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದರೆ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಬಳ್ಳಾರಿ, ದಾವಣಗೆರೆ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿಯೂ ಸಾಧಾರಣ ಮಳೆಯನ್ನು ಹವಾಮಾನ ಇಲಾಖೆ ಅಂದಾಜಿಸಿದೆ.








