ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾರ್ಗದರ್ಶನ ನೀಡಲು ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಮಾರ್ಗದರ್ಶಿಯರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಹೌದು, ಆಶಾ ಮಾರ್ಗದರ್ಶಕಿಯರನ್ನು ಕರ್ತವ್ಯದಿಂದ ಮುಕ್ತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. 2025ರ ಜೂ.12ರಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶ ರದ್ದು ಕೋರಿ ಬೆಳಗಾವಿಯ ಜರೀನಾ ಬೇಗಂ ಮುಲ್ಲಣ್ಣವರ್ ಸೇರಿ 46 ಆಶಾ ಮಾರ್ಗದರ್ಶಕಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಈ ಆದೇಶ ಮಾಡಿದೆ.
ಪ್ರತಿವಾದಿಗಳಾಗಿರುವ ರಾಷ್ಟ್ರೀಯ ಆರೋಗ್ಯ ಮಿಷನ್, ರಾಜ್ಯ ಸರ್ಕಾರದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿಗೆ ನೋಟಿಸ್ ನೀಡಿದೆ.
ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ತರಬೇತಿಗಾಗಿ ನೇಮಕಗೊಂಡಂತ ಆಶಾ ಮೆಂಟರ್ಸ್ ಗಳನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆದೇಶ ಹೊರಡಿಸಿತ್ತು.